ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೨೧: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಶನಿವಾರ ಮಿಂಚೇರಿ, ಸಂಜೀವರಾಯನಕೋಟೆ, ಬುರ್ರನಾಯಕನಹಳ್ಳಿ, ಎತ್ತಿನಬೂದಿಹಾಳ್, ಇಬ್ರಾಹಿಂಪುರ, ಬೊಬ್ಬಕುಂಟೆ ಹಾಗೂ ಚರಕುಂಟೆ ಗ್ರಾಮಗಳಲ್ಲಿ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಕಾಮಗಾರಿಗಳಿಗೆ ಸಚಿವ ಬಿ.ನಾಗೇಂದ್ರ ಅವರು ಚಾಲನೆ ನೀಡಿದರು.
ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು, ಗ್ರಾಮಸ್ಥರಿಂದ ಗ್ರಾಮದ ಮೂಲ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರ ಕುಂದು ಕೊರತೆಗಳ ಸಭೆ:
‘ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ, ನನ್ನ ತವರು ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಅಭಿವೃದ್ದಿ ಮಾಡಲು ಪಣ ತೊಡಲಾಗಿದೆ’ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಗ್ರಾಮಗಳಲ್ಲಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ “ಸಾರ್ವಜನಿಕರ ಕುಂದು ಕೊರತೆಗಳ ಸಭೆ”ಯಲ್ಲಿ ಮಾತನಾಡಿದ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ‘ಮನೆ ಬಾಗಿಲಿಗೆ ಸರ್ಕಾರ’ ಎಂಬ ಆಶಯದಂತೆ ಜಿಲ್ಲಾಡಳಿತವು ಜನರ, ಗ್ರಾಮದ ಸಮಸ್ಯೆಗಳನ್ನು ಅರಿತು, ಮೂಲ ಸೌಲಭ್ಯ ಒದಗಿಸುವ ಕುರಿತು ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ತಾಲ್ಲೂಕಿನ ಮಿಂಚೇರಿ, ಸಂಜೀವರಾಯನಕೋಟೆ, ಬುರ್ರನಾಯಕನಹಳ್ಳಿ, ಎತ್ತಿನಬೂದಿಹಾಳ್, ಇಬ್ರಾಹಿಂಪುರ, ಬೊಬ್ಬಕುಂಟೆ ಹಾಗೂ ಚರಕುಂಟೆ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಜಿಲ್ಲಾಡಳಿತದಿಂದ ಗ್ರಾಮದಲ್ಲಿ ವಯೋವೃದ್ಧರಿಗೆ ಪಿಂಚಣಿ, ರಾಜ್ಯ ಸರ್ಕಾರದ ೫ ಗ್ಯಾರಂಟಿ ಯೋಜನೆಗಳು ತಲುಪುವಲ್ಲಿ ತೊಡಕಾಗುವ ಸಮಸ್ಯೆಗಳನ್ನು ವಿಚಾರಿಸಲಾಗುತ್ತದೆ ಮತ್ತು ಅವುಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಸೇವೆ, ಶಾಲೆ, ಅಂಗನವಾಡಿ ಕೇಂದ್ರ, ವಿದ್ಯುತ್, ಬಸ್ ಸಂಪರ್ಕ, ಚರಂಡಿ ವ್ಯವಸ್ಥೆ ಸೇರಿದಂತೆ ಹಂತ ಹಂತವಾಗಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಬಳಿಕ ಸಾರ್ವಜನಿಕರಿಂದ ಸಮಸ್ಯೆಗಳ ಅಹವಾಲು ಸ್ವೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ಪರಿಹಾರ ಕ್ರಮ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್., ತಹಶೀಲ್ದಾರ ಗುರುರಾಜ, ತಾಲ್ಲೂಕು ಪಂಚಾಯತ್ ಇಓ ಮಡಗಿನ ಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.