ನವದೆಹಲಿ (ಫೆ.14): ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ಹಾಗೂ ಕಾಂಗ್ರೆಸ್ ನಾಯಕ ವಿಭಾಕರ್ ಶಾಸ್ತ್ರಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಟ್ಯಾಗ್ ಮಾಡಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದನ್ನು ತಿಳಿಸಿದ್ದಾರೆ.ರಾಜೀನಾಮೆ ನೀಡಿದ ವಿಭಾಕರ್ ಶಾಸ್ತ್ರಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ವಿಭಾಕರ ಶಾಸ್ತ್ರಿ ಟ್ವೀಟ್ ಮಾಡಿದ್ದು ‘ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದಿದ್ದಾರೆ. ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹೊತ್ತಿನಲ್ಲಿ ವಿಭಾಕರ ಶಾಸ್ತ್ರಿ ರಾಜೀನಾಮೆ ನೀಡಿದ್ದಾರೆ. ಸೋಮವಾರದಂದು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಸೋಮವಾರ ಬಿಜೆಪಿ ಸೇರಿದ್ದಾರೆ.