ಬೆಂಗಳೂರು, (ಫೆಬ್ರವರಿ 15): ಕರ್ನಾಟಕ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಇದೀಗ ತನ್ನ ನಿರ್ಬಂಧ ಆದೇಶವನ್ನು ವಾಪಸ್ ಪಡೆದಿದೆ.
ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿತ್ತು. ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು.
10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು. ಆದ್ರೆ, ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ತನ್ನ ಸುತ್ತೋಲೆಯನ್ನು ಇದೀಗ ವಾಪಸ್ ಪಡೆದುಕೊಂಡಿದೆ.