ಬಳ್ಳಾರಿ,ಮಾ.18 : ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಮತ್ತು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಶೇಷ ಕಾಳಜಿ ವಹಿಸಬೇಕು. ಉತ್ತಮ ಫಲಿತಾಂಶ ತರುವಲ್ಲಿ ಎಲ್ಲರೂ ಕೂಡಿ ಶ್ರಮಿಸಿದರೆ ರಾಜ್ಯದಲ್ಲಿ ಜಿಲ್ಲೆಯು ಉತ್ತಮ ಸ್ಥಾನದಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಿ.ಆರ್.ಪಿಗಳು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಇದೆಯೇ ಎಂಬುದನ್ನು ಪರಿಶೀಲಿಸಬೇಕು. ಪರೀಕ್ಷೆ ನಡೆಯುವ ದಿನಗಳಂದು ವಿದ್ಯುತ್ ಆಡಚರಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯನ್ನು ಮುಂಚಿತವಾಗಿ ಅಧಿಕಾರಿಗಳಿಗೆ ಮಾರ್ಗಾನುಸಾರ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು. ಯಾವ ವಿದ್ಯಾರ್ಥಿಗೂ ತೊಂದರೆಯಾಗಬಾರದು ಎಂದು ಕೆಕೆಆರ್ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಆಯಾ ತಹಶೀಲ್ಧಾರರುಗಳಿಗೆ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳನ್ನು ಭೇಟಿ ಮಾಡುವಂತೆ ಸೂಚಿಸಿದರು. ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಕ್ರಮ ಅನುಸರಿಸಲು ಸೂಚಿಸಿದರು.
ಸಂಡೂರು ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಫಲಿತಾಂಶ ಸುಧಾರಣೆಗಾಗಿ ವಸತಿ ಸಹಿತ ತರಬೇತಿಯು ಬಹಳ ಒಳ್ಳೆಯ ಕಾರ್ಯಕ್ರಮವನ್ನು ನಡೆಸಿದ್ದಾರೆ. ಅದರಂತೆ ಉಳಿದ ತಾಲೂಕಿನ ಬಿಇಒ ಗಳು ಕೊನೆಯ ಹಂತದಲ್ಲಿ ಇಂತಹ ವಿನೂತನ ಕಾರ್ಯಕ್ರಮ ಮಾಡಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುವಂತೆ ಕ್ರಮಗಳನ್ನು ಅನುಸರಿಸಿ ಪರೀಕ್ಷೆಯನ್ನು ಯಶ್ವಸಿಗೊಳಿಸುವಂತೆ ಸೂಚಿಸಿದರು.
ಈಗಾಗಲೇ ಬಹಳ ಬಿಸಿಲಿನ ತಾಪ ಹೆಚ್ಚು ಇದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್ಗಳ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯು ಬಹಳ ಮುಖ್ಯವಾದದ್ದು, ಕೇಂದ್ರಸ್ಥಾನದಿಂದ ದೂರವಿರುವ ಸ್ಥಳಗಳಿಗೆ ಖಜಾನೆಯಿಂದ ಅರ್ಧ ಗಂಟೆ ಮುಂಚಿತವಾಗಿ ಪ್ರಶ್ನೆ ಪತ್ರಿಕೆಗಳನ್ನು ಪಡೆದು ಪರೀಕ್ಷೆ ನಡೆಯುವ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ತಲುಪುವಂತೆ ಕ್ರಮವಹಿಸಬೇಕು ಎಂದರು.
ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ ಇರುವುದಾಗಿ ಎಲ್ಲಾ ಕೇಂದ್ರಗಳ ಮುಖ್ಯಸ್ಥರು ಚಕ್ ಲಿಸ್ಟ್ನಲ್ಲಿ ಮಾಹಿತಿಯನ್ನು ನೀಡಲಾಗಿದೆ ಹಾಗೂ ಡೆಸ್ಕ್ಗಳ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಪುನರ್ ಪರಿಶೀಲಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, 300ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಸೂಚಿಸಿದರು.
*ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಮಾಹಿತಿ:*
ಜಿಲ್ಲೆಯಲ್ಲಿನ ಒಟ್ಟು 310 ಹತ್ತನೇ ತರಗತಿಯ ಶಾಲೆಗಳಿಂದ 10,234 ಬಾಲಕರು, 10617 ಬಾಲಕಿಯರು ಸೇರಿದಂತೆ ಒಟ್ಟು 20,851 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
*ಪರೀಕ್ಷಾ ಕೇಂದ್ರಗಳ ಮಾಹಿತಿ:*
ಜಿಲ್ಲೆಯಲ್ಲಿ ಒಟ್ಟು 61 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಅದರಲ್ಲಿ 04 ಅತಿ ಸೂಕ್ಷ್ಮ, ಸೂಕ್ಷ್ಮ-14 ಕೇಂದ್ರಗಳನ್ನಾಗಿ ಗುರುತಿಸಲಾಗಿದೆ, 43 ಸಾಮಾನ್ಯ ಪರೀಕ್ಷಾ ಕೇಂದ್ರಗಳಿವೆ. 1102 ಕೊಠಡಿಗಳನ್ನು ಪರೀಕ್ಷಾ ಕೊಠಡಿಗಳನ್ನು ತೆಗೆದುಕೊಳ್ಳಲಾಗಿದೆ ಹಾಗೂ 6 ಅಡಿ ಅಂತರದಲ್ಲಿ ಒಟ್ಟು 11,661 ಡೆಸ್ಕ್ಗಳ ಆಸನ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರ ಆದೇಶದನ್ವಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ.144 ರನ್ವಯ ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ನಿರ್ಭಂದಿತ ಪ್ರದೇಶವೆಂದು ನಿಷೇಧಿಸಿದ್ದು, ಆದೇಶ ಜಾರಿ ಮಾಡಿಸಲು ಕ್ರಮ ವಹಿಸಲಾಗುವುದು ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಡಯಟ್ನ ಪ್ರಾಚಾರ್ಯರಾದ ಹನುಮಕ್ಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕ ಎ.ಕೆ. ಸತ್ಯನಾರಾಯಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.