ಬಳ್ಳಾರಿ,ಮಾ.22 :ಲೋಕಸಭಾ ಚುನಾವಣೆ-2024 ರ ಹಿನ್ನೆಲೆ ಕಡಿಮೆ ಪ್ರಮಾಣದ ಮತದಾನ ಇರುವ ಕಡೆ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳುವ ಕುರಿತು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಬಿಎಲ್ಓಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಮೂಡಿಸುವ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನ ಮೌಲ್ಯದ ಕುರಿತು ಜಿಲ್ಲೆಯ ಗ್ರಾಮ ಪಂಚಾಯತ್ ಹಾಗೂ ಹೋಬಳಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಬಳ್ಳಾರಿ ತಾಲ್ಲೂಕು ತಾಪಂ ಇಓ ಮಡಗಿನ ಬಸಪ್ಪ ಅವರು ಮಾತನಾಡಿ, ಚುನಾವಣೆ ಕುರಿತು ಅರಿವು ಮೂಡಿಸಿ ನಿರ್ಭೀತರಾಗಿ ಮೇ-07 ರಂದು ಮತದಾನವನ್ನು ಮಾಡಲು ಸಾರ್ವಜನಿಕರಿಗೆ ತಿಳಿಸುವಂತೆ ಸೂಚಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ (ಪಂ.ರಾಜ್) ಮಹಮ್ಮದ್ ಗೌಸ್.ಆರ್., ಬಳ್ಳಾರಿ ತಾಲ್ಲೂಕಿನ 93-ಬಳ್ಳಾರಿ ಗ್ರಾಮೀಣ ವಿಧಾನ ಸಭಾಕ್ಷೇತ್ರದ ತಾಲ್ಲೂಕು ಸ್ವೀಪ್ ಸಮಿತಿಯ ಅಧಿಕಾರಿಗಳು, ಬಳ್ಳಾರಿ ತಾಲ್ಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿ.ಎಲ್.ಓ ಮತ್ತು ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.