ಬೆಂಗಳೂರು, ಜುಲೈ. 25: ಬಳ್ಳಾರಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಮತ್ತು ವಿಜಯನಗರ ಜಿಲ್ಲೆಯ ಆರು ತಾಲೂಕುಗಳಲ್ಲಿ ತಾಲೂಕು ಮಟ್ಟದ ಆಡಳಿತ ಸೌಧಗಳ ಅಗತ್ಯವಿದ್ದು, ಆದಷ್ಟು ಶೀಘ್ರದಲ್ಲಿ ಎಲ್ಲಾ 11 ತಾಲೂಕುಗಳಲ್ಲಿ ತಾಲೂಕು ಆಡಳಿತ ಸೌಧಗಳ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಕೊಟ್ಟೂರು ತಾಲೂಕಿನ ಒಟ್ಟು 2.61 ಎಕರೆ ಪ್ರದೇಶದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಆಡಳಿತ ಸೌಧ ನಿರ್ಮಾಣಕ್ಕೆ ಸ್ಥಳವನ್ನು ಗುರಿತಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಪ್ರಸ್ತಾವನೆ ಸರ್ಕಾರದಲ್ಲಿ ಸ್ವೀಕೃತವಾಗಿದೆ ಎಂದರು.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಮತ್ತು ಸಂಡೂರು ತಾಲೂಕುಗಳಲ್ಲಿ ತಾಲೂಕು ಆಡಳಿತಸೌಧಗಳಿವೆ. ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳಲ್ಲಿ ತಾಲೂಕು ಆಡಳಿತ ಸೌಧ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಆದಷ್ಟು ಶೀಘ್ರದಲ್ಲೇ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉತ್ತರಿಸಿದರು.