ನವದೆಹಲಿ: ಮುಂಬರುವ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದೆ. 3ನೇ ಬಾರಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಲು ಕಾತರವಾಗಿರುವ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಮಾವೇಶವು ಇಂದು ಮತ್ತು ನಾಳೆ ವಾರಾಂತ್ಯ ನಡೆಯಲಿದೆ.
ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು: ಇಂದು ಬೆಳಗ್ಗೆ 10 ಗಂಟೆಗೆ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ಅಧಿಕಾರಿಗಳು, ರಾಷ್ಟ್ರೀಯ ಪರಿಷತ್ತಿನ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ರಾಜ್ಯಾಧ್ಯಕ್ಷರು, ಲೋಕಸಭಾ ಕ್ಲಸ್ಟರ್ನ ಉಸ್ತುವಾರಿಗಳು ಮತ್ತು ಸಂಯೋಜಕರು, ಮೇಯರ್, ಪುರಸಭೆ ಮತ್ತು ನಗರ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಮೋರ್ಚಾಗಳ ರಾಜ್ಯ ಅಧ್ಯಕ್ಷರು, ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಐಟಿ ರಾಜ್ಯ ಸಂಚಾಲಕರು, ಆಯೋಗದ ಮಂಡಳಿ ನಿಗಮದ ಅಧ್ಯಕ್ಷರು, ಕೋಶಗಳ ಸಂಚಾಲಕರು ಮತ್ತು ಪಕ್ಷದ ಇತರ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.