ಬಳ್ಳಾರಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿ ಕಾರ್ಯಕರ್ತರು, ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಈಡಿಗ ಹಾಸ್ಟೆಲ್ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದ್ವಿಚಕ್ರ ವಾಹನಗಳ ಶವಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ದ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಸುಮಾರು ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ರಾಯಲ್ ವೃತ್ತದ ಬಳಿ ದ್ವಿಚಕ್ರ ವಾಹನ ಹಾಗೂ ಎತ್ತಿನ ಬಂಡಿಗಳ ಮೂಲಕ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿ ನಿರ್ಮಿಸಲು ಮುಂದಾದಾಗ ಪೋಲೀಸ್ ಹಾಗೂ ಪಾಲಿಕೆ ಸದಸ್ಯ ಹನುಮಂತ ಹಾಗೂ ಇತರರ ಮಧ್ಯೆ ವಾಗ್ವಾದ ನಡೆಯಿತು. ನಂತರ ಡಿಸಿ ಕಚೇರಿಗೆ ತೆರಳಿದ ಕಾರ್ಯಕರ್ತರು, ಮುಖಂಡರು ನಾನಾ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ ಅವರು ಮಾತನಾಡಿ, ಸಿ.ಎಂ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಮುಂದುವರೆಸಲು ಪೆಟ್ರೋಲ್, ಡಿಸೇಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಜನರ ನೆಮ್ಮದಿ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಈ ಕ್ರಮ ಸರಿಯಲ್ಲ, ಕೂಡಲೇ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು, ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಬಿಜೆಪಿ ಯುವ ಘಟಕದ ಜಿಲ್ಲಾಧ್ಯಕ್ಷ ಎಂ.ಎಸ್.ಸಿದ್ದಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಐನಾಥ್ ರೆಡ್ಡಿ, ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ, ಹನುಮಂತ, ಸುರೇಖಾ ಎಸ್.ಮಲ್ಲನಗೌಡ, ಮಹಿಳಾ ಘಟಕದ ಸುಮಾ ರೆಡ್ಡಿ, ಸುಗುಣ, ರಾಜ್ಯ ಕಾರ್ಯಕಾರಿ ಸದಸ್ಯೆ ವಿಜಯಲಕ್ಷ್ಮಿ, ಕೆ.ರಾಮಲಿಂಗಪ್ಪ, ರಾಮಂಜಿನಿ, ಮಲ್ಲನಗೌಡ, ಡಾ. ಮಹಿಪಾಲ, ವಿರೂಪಾಕ್ಷ ಗೌಡ, ಅಡವಿಸ್ವಾಮಿ, ಕೆ.ಮಲ್ಲೇಶ್ ಸೇರಿದಂತೆ ಇತರರು ಇದ್ದರು.