ನವದೆಹಲಿ: ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31ರಿಂದ ಏಪ್ರಿಲ್ 4ರವರೆಗೆ 2025ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. 2025-26ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. ಇದರ ನಂತರ ಸಂಸತ್ತು ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ವಿರಾಮ ತೆಗೆದುಕೊಳ್ಳುತ್ತದೆ. ವಿವಿಧ ಸಚಿವಾಲಯಗಳ ಅನುದಾನಗಳ ಬೇಡಿಕೆಗಳನ್ನು ಚರ್ಚಿಸಲು ಮತ್ತು ಬಜೆಟ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಾರ್ಚ್ 10ರಿಂದ ಮತ್ತೆ ಸಭೆ ಸೇರುತ್ತದೆ.