ಬೆಂಗಳೂರು: ರಾಜ್ಯದಲ್ಲಿ ಹತ್ತು ಲಕ್ಷ ರೂಪಾಯಿಗಳ ಒಟ್ಟು ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಹ ವ್ಯಾಪಕ ಚರ್ಚೆಯಾಗುತ್ತಿದೆ.
ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೇವಸ್ಥಾನದ ಹಣ ಇತರೆ ಧರ್ಮಕ್ಕೆ ಬಳಸಲ್ಲ
ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ.
ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ ಎಂದು ಜನತೆಗೆ ಮನವಿ ಮಾಡಿದ್ದಾರೆ.