ಹಂಪಿ/ಹೊಸಪೇಟೆ: ಹಂಪಿ ಉತ್ಸವ -2024ಕ್ಕೆ ವಿಶ್ವ ಪಾರಂಪರಿಕ ತಾಣ ಹಂಪಿ ಮತ್ತು ಹೊಸಪೇಟೆ ಸಿಂಗರಿಸಿಕೊಂಡಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಲಿದ್ದಾರೆ.
ಫೆ. 2ರಂದು ಗಾಯತ್ರಿ ಪೀಠ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಹಂಪಿ ನೆಲದ ವೈಭವವನ್ನು ಜಗತ್ತಿಗೆ ಮತ್ತೊಮ್ಮೆ ಸಾರಲು ಉತ್ಸವಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.
ಉತ್ಸವಕ್ಕೆ ಹಂಪಿಯಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಈ ವೇದಿಕೆಗಳಲ್ಲಿ ಹಾಗೂ ಜಾನಪದವಾಹಿನಿ ಮತ್ತು ಧ್ವನಿ ಮತ್ತು ಬೆಳಕು ಕಾರ್ಯಕ್ರಮದಲ್ಲಿ ಐದು ಸಾವಿರ ಕಲಾವಿದರು ಈ ನೆಲದ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಉಣಬಡಿಸಲಿದ್ದಾರೆ. ಉತ್ಸವಕ್ಕೆ 10ಲಕ್ಷ ಜನರು ಆಗಮಿಸುವ ನಿರೀಕ್ಷೆಗಳಿವೆ.
ಉತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸೂಕ್ತ ಭದ್ರತೆ ಹಾಗೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ಸವದ ಅಂಗವಾಗಿ ಗುರುವಾರ ಹಂಪಿ ಬೈ ಸ್ಕೈ ಹೆಲಿಕಾಪ್ಟರ್ ಯಾನಕ್ಕೆ ಚಾಲನೆ ನೀಡಲಾಯಿತು. ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ.