ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಮೂಲಕ ಶೀಘ್ರದಲ್ಲೇ ನಡೆಯುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬ್ಯಾಲೆಟ್ ಪೇಪರ್ನಲ್ಲಿ ನಡೆಯಲಿವೆ.
ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಬೇಡ, ಅದನ್ನು ಹ್ಯಾಕ್ ಮಾಡಿ ಬಿಜೆಪಿ ಗೆಲ್ಲುತ್ತಿದೆ ಎಂದು ಕಾಂಗ್ರೆಸ್ ವಾದಿಸುತ್ತಿತ್ತು. ಅದಕ್ಕೆ ಪೂರಕವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿದೆ. ಈ ತೀರ್ಮಾನವು ರಾಜ್ಯದ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ. ಇದುವರೆಗೂ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬ್ಯಾಲೆಟ್ ಪೇಪರ್ನಲ್ಲಿಯೇ ನಡೆಸಲಾಗುತ್ತಿತ್ತು. ಅದು ಮುಂದುವರೆಯಲಿದೆ. ಆದರೆ, ಪಾಲಿಕೆ ಚುನಾವಣೆಗಳಿಗೆ ಚುನಾವಣೆ ಆಯೋಗ ಇವಿಎಂ ಅನ್ನು ಬಳಸುತ್ತಿತ್ತು. ಜಿಪಂ, ತಾಪಂ ಚುನಾವಣೆಗಳಲ್ಲೂ ಇವಿಎಂ ಬಳಕೆಯಾಗುತ್ತಿತ್ತು.
ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ. ಇವಿಎಂಗಳ ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆಯ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಮತದಾರರ ವಿಶ್ವಾಸವನ್ನು ಹೆಚ್ಚಿಸುವ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ಇವಿಎಂ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ವರ್ಷಾಂತ್ಯಕ್ಕೆ ಜಿಪಂ, ತಾಪಂ ಚುನಾವಣೆ!
ಇನ್ನು, ರಾಜ್ಯದ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಶೀಘ್ರದಲ್ಲಿ ನಡೆಯಲಿದೆ. ಈಗಾಗಲೇ ಚುನಾವಣೆಗೆ ನಾಲ್ಕು ವರ್ಷ ತಡವಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪ್ರಕ್ರಿಯೆ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಎರಡು – ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದರು. 2025ರ ವರ್ಷಾಂತ್ಯದೊಳಗೆ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ ವೇಳೆಗೆ ಚುನಾವಣೆಯ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದ್ದು, ಡಿಸೆಂಬರ್ನಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಈಗಾಗಲೇ ಚುನಾವಣಾ ಆಯೋಗ ಕೂಡ ಅಗತ್ಯ ಸಿದ್ಧತೆ ನಡೆಸಿದ್ದು, ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಇತ್ತೀಚೆಗೆ ಮಾಹಿತಿ ನೀಡಿದ್ದರು.