ಬಳ್ಳಾರಿ,ಏ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣ ಮತ್ತು ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ 02 ರಂದು ಶಂಕರಾಚಾರ್ಯ ಜಯಂತಿ, ಮೇ 05 ರಂದು ಭಗೀರಥ ಜಯಂತಿ ಮತ್ತು ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಮೇ 02 ರಂದು ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ನಗರದ ಸಂಗನಕಲ್ಲು ರಸ್ತೆಯ ಶೃಂಗೇರಿ ಶಂಕರಚಾರ್ಯ ಮಠದ ಭಾರತಿ ತೀರ್ಥ ಸಭಾಭವನದಲ್ಲಿ ಆಯೋಜಿಸಲಾಗುವುದು. ಜಯಂತಿಯ ಅಂಗವಾಗಿ ಮೆರವಣಿಗೆಯು ನಡೆಯಲಿದೆ ಎಂದು ತಿಳಿಸಿದರು.
ಮೇ 05 ರಂದು ಭಗೀರಥ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗಿದೆ. ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ.
ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ಮೆರವಣಿಗೆಯು ಒಳಗೊಂಡಿರಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಸ್ವಚ್ಛತೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯು ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.
ಜಯAತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ-ಸೂಚನೆ ನೀಡಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.